ಮಂಗಳೂರು, ಜನವರಿ : ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ರೂಪಿಸುವ ಆಲೋಚನೆ ಸರ್ಕಾರದ ಮುಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ಕುರಿತು ಜನವರಿ 10ರಂದು ಮಂಗಳೂರಿನಲ್ಲಿ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮಲೆನಾಡು ಪ್ರದೇಶದ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಅವರು ಹೇಳಿದರು.
ಕಾರವಾರ ಶಾಸಕ ಸತೀಶ್ ಸೈಲ್ ಅವರ ಕಚೇರಿಯಲ್ಲಿ ಭಾನುವಾರ ರಾತ್ರಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಈ ಭಾಗದ ಶಾಸಕರೊಂದಿಗೆ ಒಂದು ಸುತ್ತಿನ ಚರ್ಚೆ ನಡೆಸಿರುವುದಾಗಿ ಹೇಳಿದರು. ಮಲೆನಾಡು ಹಾಗೂ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪಿಪಿಪಿ (PPP) ಮಾದರಿಯಲ್ಲಿ ಹೊಸ ನೀತಿ ತರಲಾಗುವುದು. ಖಾಸಗಿ ಬಂಡವಾಳ ಹೂಡಿಕೆಗೆ ಹೆಚ್ಚಿನ ಅವಕಾಶ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದರು.
ಈ ಸಭೆಗೆ ಬಂಡವಾಳ ಹೂಡಿಕೆದಾರರನ್ನು ಆಹ್ವಾನಿಸಲಾಗುತ್ತಿದ್ದು, ವಿದೇಶಿ ಹೂಡಿಕೆದಾರರಿಗೂ ಆಹ್ವಾನ ನೀಡಲಾಗುವುದು. ಹೂಡಿಕೆದಾರರು ತಮ್ಮ ಬೇಡಿಕೆಗಳ ಜೊತೆಗೆ ಸಲಹೆ–ಸೂಚನೆಗಳನ್ನು ನೀಡಬಹುದಾಗಿದೆ. ಬಂಡವಾಳ ಹೂಡಿಕೆಗೆ ಆಸಕ್ತರನ್ನು ಆಹ್ವಾನಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಹೇಳಿದರು.
ಸಭೆಯಲ್ಲಿ ಮುಖ್ಯಮಂತ್ರಿ, ಪ್ರವಾಸೋದ್ಯಮ ಸಚಿವರು ಹಾಗೂ ವಿಧಾನಸಭಾಧ್ಯಕ್ಷರು ಭಾಗವಹಿಸಲಿದ್ದಾರೆ. ಸಂಸದರು, ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೂ ಆಹ್ವಾನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಭೆಯ ಸಂಪೂರ್ಣ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದರು.
ಸಿಆರ್‌ಝೆಡ್ (CRZ) ಅನುಮತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಷಯದ ಚರ್ಚೆಗೆ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದರು. ಗೋವಾ ಹಾಗೂ ಕರ್ನಾಟಕಕ್ಕೆ ಬೇರೆ ಬೇರೆ ಕಾನೂನು ಸಾಧ್ಯವಿಲ್ಲ. ಕಾನೂನು ಚೌಕಟ್ಟಿನೊಳಗೇ ಕಾರ್ಯನಿರ್ವಹಿಸಲಾಗುವುದು. ಸಮುದ್ರ ತೀರ ರಕ್ಷಣೆಗೆ ಇರುವ ಮಾರ್ಗಸೂಚಿಗಳಂತೆ ಕೆಲಸ ನಡೆಯಲಿದೆ ಎಂದು ಹೇಳಿದರು.
ಈ ಭಾಗದ ಯುವಜನತೆ ಉದ್ಯೋಗಕ್ಕಾಗಿ ಮುಂಬೈ, ಗೋವಾ, ಬೆಂಗಳೂರು ಹಾಗೂ ವಿದೇಶಗಳಿಗೆ ವಲಸೆ ಹೋಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಇಲ್ಲಿನ ಮಾನವ ಸಂಪನ್ಮೂಲವನ್ನು ಇಲ್ಲಿಯೇ ಬಳಸಿಕೊಳ್ಳುವ ಅಗತ್ಯವಿದೆ ಎಂದರು. ಕಾರವಾರ ಏರ್‌ಪೋರ್ಟ್ ನಿರ್ಮಾಣಕ್ಕೆ ಭೂಮಿ ನೀಡಿಕೆ, ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಹಲವು ವಿಷಯಗಳಿಗೆ ಕ್ಯಾಬಿನೆಟ್ ಒಪ್ಪಿಗೆ ನೀಡಲಾಗಿದೆ. ನೌಕಾದಳದೊಂದಿಗೆ ಒಪ್ಪಂದ ಮಾಡಿಕೊಂಡು ಅಭಿವೃದ್ಧಿಗೆ ತೀರ್ಮಾನಿಸಲಾಗಿದೆ ಎಂದರು.
ಕಾರವಾರ ಶಾಸಕ ಸತೀಶ್ ಸೈಲ್ ಅವರು 210 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿರುವುದಾಗಿ ಹೇಳಿದರು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ನೂತನ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದರು.
ಅರಣ್ಯ ಭೂಮಿ ಒತ್ತುವರಿ ವಿಚಾರದಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅರಣ್ಯ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಭೂಮಿ ನೀಡುವ ಕಾನೂನು ತರಲಾಗಿತ್ತು ಎಂದು ಸ್ಮರಿಸಿದರು. ಅರಣ್ಯ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಡಿಎಫ್‌ಒಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪಂಚಾಯತ್ ಮಟ್ಟದಲ್ಲೇ ನಿರ್ಣಯ ಕೈಗೊಂಡು, ಮೂರು ತಲೆಮಾರಿನಿಂದ ವಾಸವಿರುವುದಕ್ಕೆ ಪ್ರಮಾಣ ಪತ್ರ ನೀಡಿದರೆ ಅದಕ್ಕಿಂತ ದೊಡ್ಡ ದಾಖಲೆ ಮತ್ತೊಂದಿಲ್ಲ. ಮೂರು ಎಕರೆ ಒಳಗೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಬದುಕುತ್ತಿರುವ ಬಡವರು ಹಾಗೂ ರೈತರ ರಕ್ಷಣೆಯೇ ನಮ್ಮ ಜವಾಬ್ದಾರಿ ಎಂದು ಹೇಳಿದರು. ಬುಡಕಟ್ಟು ಸಮುದಾಯಗಳಿಗೆ 25 ವರ್ಷ ಹಾಗೂ ಇತರ ಸಮುದಾಯಗಳಿಗೆ 75 ವರ್ಷ ಅವಕಾಶವಿದೆ ಎಂದರು.
ನದಿ ಜೋಡಣೆ ಕುರಿತು ಪ್ರತಿಕ್ರಿಯಿಸಿದ ಅವರು, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಡಿಪಿಆರ್ ತಯಾರಿಸಲು ಈಗಾಗಲೇ ಅನುಮತಿ ನೀಡಿದ್ದು ಸಹಿ ಮಾಡಲಾಗಿದೆ ಎಂದರು. ಕೇಂದ್ರ ಸರ್ಕಾರ ಶೇ.90 ಹಾಗೂ ರಾಜ್ಯ ಸರ್ಕಾರ ಶೇ.10 ಅನುದಾನ ನೀಡಲಿದೆ ಎಂದು ತಿಳಿಸಿದರು.
ಸ್ಥಳೀಯ ವಿರೋಧದ ಕುರಿತು ಮಾತನಾಡಿದ ಅವರು, ಜನರು ಹಾಗೂ ರೈತರಿಗೆ ಲಾಭವಾಗುವುದೇ ಮುಖ್ಯ. ಒಳ್ಳೆಯ ಕೆಲಸಕ್ಕೆ ವಿರೋಧ ವ್ಯಕ್ತವಾಗುವುದು ಸಹಜ. ಕಾನೂನು ಪ್ರಕಾರ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕುರಿತು ಮಾತನಾಡಿದ ಅವರು, ಈ ಯೋಜನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. 100–200 ಎಕರೆಯಲ್ಲಿ ಸ್ಟೋರೇಜ್ ಪಾಯಿಂಟ್ ನಿರ್ಮಿಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದು ರಾಜ್ಯಕ್ಕೆ ದೊಡ್ಡ ಆಸ್ತಿಯಾಗಲಿದೆ. ಇದಕ್ಕೆ ವಿರೋಧ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ನೂತನ ಸೇತುವೆಗಳ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಂಗಾವತಿ ಹಾಗೂ ಗೋಕರ್ಣ ಸೇತುವೆಗಳನ್ನು ಮತ್ತೊಂದು ದಿನ ಉದ್ಘಾಟಿಸಲಾಗುವುದು. ಸ್ವಲ್ಪ ದಿನ ಕಾಯಬೇಕು. ಜಿಲ್ಲೆಯ ಐದು ಮಂದಿ ಶಾಸಕರು ಒಟ್ಟಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಜನತೆ ನಮ್ಮ ಸರ್ಕಾರಕ್ಕೆ ಶಕ್ತಿ ನೀಡಿದ್ದಾರೆ ಎಂದು ಹೇಳಿದರು.
ಜಿಲ್ಲೆಗೆ ಎರಡು ಬಾರಿ ಭೇಟಿ ನೀಡಿರುವುದು ಶುಭ ಸೂಚನೆಯೇ ಎಂಬ ಪ್ರಶ್ನೆಗೆ, “ನಿಮ್ಮನ್ನು ಭೇಟಿ ಮಾಡಿದ್ದೇ ಶುಭ ಸೂಚನೆ” ಎಂದು ಡಿಸಿಎಂ ಉತ್ತರಿಸಿದರು.

