ಬೆಂಗಳೂರು- ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳನ್ನು ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ಹಾಗೂ ತುಷ್ಟೀಕರಣಕ್ಕಾಗಿ ರಾಜ್ಯದ ಹಿತವನ್ನು ಬಲಿಕೊಡಬಾರದು. ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಮತ್ತು ಗಡೀಪಾರಿಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ಸ್ವತಃ ಅಕ್ರಮ ವಲಸಿಗರೇ ಒಪ್ಪಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಮತ್ತು ಗಡೀಪಾರಿಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಕಳೆದ ಒಂದು ವಾರದಿಂದ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 71 ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ಆಧಾರ್ ಕಾರ್ಡ್, ಪಾಸ್ಪೋರ್ಟ್ ಬಳಸಿಕೊಂಡು ಮಾನವ ಕಳ್ಳಸಾಗಣೆಯಂತಹ ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ನುಸುಳುಕೋರರು ಧೈರ್ಯವಾಗಿ ನ್ಯಾಯಾಲಯದಲ್ಲಿ ಜಾಮೀನು ಕೇಳುತ್ತಿರುವುದು ಅತ್ಯಂತ ಆಘಾತಕಾರಿ ಬೆಳವಣಿಗೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ರಾಜ್ಯದ ಶಾಂತಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯ ಮೇಲೆ ಗಂಭೀರ ದುಷ್ಪರಿಣಾಮ ಬೀರುವುದಂತೂ ಕಟ್ಟಿಟ್ಟ ಬುತ್ತಿ ಎಂದು ಸರ್ಕಾರಕ್ಕೆ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

