ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತಿಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ವಿಧಾನ ಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆಯಲಾಯಿತು. ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ ಸಭಾಧ್ಯಕ್ಷರು ಮತ್ತು ಸಚಿವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಜೊತೆ ಇದೆ. ಕಾನೂನು ಬಾಹಿರ ಚಟುವಟಿಕೆ ನಡೆಸುವವರು ಹಾಗೂ ಅದಕ್ಕೆ ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ಕುರಿತಂತೆ ಇದೇ ವೇಳೆ ಚರ್ಚೆ ನಡೆಸಲಾಯಿತು. ಮೇ 16 ರಂದು ನೂತನ ಜಿಲ್ಲಾಧಿಕಾರಿ ಕಚೇರಿಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಅಗತ್ಯ ತಯಾರಿಗಳನ್ನು ನಡೆಸುವಂತೆ ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾಗವಹಿಸಿದ್ದರು.

