ಬೆಂಗಳೂರು: ಪ್ರಜ್ವಲ್ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೂಚನೆ ನೀಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಪತ್ರವನ್ನು ಹಂಚಿಕೊಂಡಿರುವ ಅವರು, ಈ ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಹೇಳಿದ್ದಾರೆ.
ಪತ್ರದಲ್ಲಿ ಏನಿದೆ?
ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ಇದನ್ನೂ ಓದಿ: ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ರೇವಣ್ಣ– ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ
ಈಗಾಗಲೇ ನಾನು ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ನಾನು ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ.ಇದನ್ನೂ ಓದಿ: ಯಾದಗಿರಿಯಲ್ಲಿ ಬಿಸಿಲಿಗೆ ಮೀನುಗಳ ಮಾರಣಹೋಮ
ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ನಾನು ಇತ್ತಿಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ತೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ. ಇದನ್ನೂ ಓದಿ: ಮದುವೆಗೆ ಹೆಣ್ಣು ಸಿಗದೆ ಮನನೊಂದು ಯುವಕ ನೇಣಿಗೆ ಶರಣು
ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೇ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್ ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದನ್ನು ನಾನು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೇ ಹಿಂದಿರುಗಿ ಬರಬೇಕು.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೇ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೇ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್