ಬೆಂಗಳೂರು: ತಿನ್ನುವ ಬ್ರೆಡ್‌ನೊಳಗೆ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ನೈಜೀರಿಯಾ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ. ಆರೋಪಿಯು ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್ ಮೂಲಕ ಕೊಕೇನ್ ಸಾಗಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ತನಿಖೆಯಲ್ಲಿ, ಯಾರಿಗೂ ಅನುಮಾನ ಬಾರದಂತೆ ಬ್ರೆಡ್‌ನ ಒಳಭಾಗವನ್ನು ಕತ್ತರಿಸಿ ಅದರೊಳಗೆ ಕೊಕೇನ್ ಅಡಗಿಸಿ ಡ್ರಗ್ಸ್ ಸಾಗಾಟ ಮಾಡಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ.
ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ಡ್ರಗ್ಸ್ ಜಾಲದ ಹಿನ್ನಲೆ ಹಾಗೂ ಇತರರ ಪಾತ್ರದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

