ಕಾಠ್ಮಂಡು, ಮಾ.15: ನೇಪಾಳದ ಗೂರ್ಖಾ ಜಿಲ್ಲೆಯಲ್ಲಿ ಭಕ್ತರ ಬಸ್ ಅಪಘಾತಕ್ಕೀಡಾಗಿ 7 ಮಂದಿ ಭಾರತೀಯರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮನಕಾಮನ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಮರಳುತ್ತಿದ್ದ ವೇಳೆ 8 ಭಕ್ತರಿದ್ದ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತಕ್ಷಣ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ 8 ಮಂದಿಯನ್ನು ಗೂರ್ಖಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೋರ್ವ ಭಕ್ತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್‌ನಲ್ಲಿ ಪ್ರಯಾಣಿಕರು ಹೆಚ್ಚಾಗಿದ್ದ ಕಾರಣ ಚಾಲಕನಿಗೆ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಗೂರ್ಖಾ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

