ಬೆಂಗಳೂರು: ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಇಂದು ಬೆಳಿಗ್ಗೆ ಸುಮಾರು 7 ಗಂಟೆ ವೇಳೆಗೆ ಕಟ್ಟಡದಲ್ಲಿದ್ದ ಫ್ಯಾನ್ಸಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಅಂಗಡಿಯಲ್ಲಿ ಇರಿಸಿದ್ದ ಅನೇಕ ಸೊತ್ತುಗಳು ಸಂಪೂರ್ಣ ಸುಟ್ಟು ಹೋಗಿವೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಅಗ್ನಿಶಾಮಕ ದಳದ ಆರು ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ದಟ್ಟ ಹೊಗೆ ಆವರಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಹಾಗೂ ಮಾಸ್ಕ್ ಧರಿಸಿ ಅಂಗಡಿ ಒಳಗೆ ಪ್ರವೇಶಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಕಾರ್ಯಾಚರಣೆ ಮುಂದುವರಿದಿದೆ.
ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

