ದೆಹಲಿ: ವಾರದಲ್ಲಿ ಐದು ದಿನ ಕೆಲಸದ ವ್ಯವಸ್ಥೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜ.23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಫಲಪ್ರದವಾಗದ ಹಿನ್ನೆಲೆಯಲ್ಲಿ, ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ (UFBU) ಈ ಮುಷ್ಕರಕ್ಕೆ ಕರೆ ನೀಡಿದೆ.
ಈ ಮುಷ್ಕರದ ಪರಿಣಾಮವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಬ್ಯಾಂಕ್ ಆಫ್ ಬರೋಡಾ (BOB) ಸೇರಿದಂತೆ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ನಗದು ಠೇವಣಿ–ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ಹಾಗೂ ಇತರೆ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಆದರೆ ಖಾಸಗಿ ವಲಯದ ಬ್ಯಾಂಕುಗಳಾದ HDFC ಬ್ಯಾಂಕ್, ICICI ಬ್ಯಾಂಕ್ ಮತ್ತು Axis ಬ್ಯಾಂಕ್ ಮುಷ್ಕರದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ.
ಸಂಧಾನ ಪ್ರಕ್ರಿಯೆಯಲ್ಲಿ ವಿಸ್ತೃತ ಚರ್ಚೆಗಳು ನಡೆದರೂ ನಮ್ಮ ಬೇಡಿಕೆಗಳಿಗೆ ಯಾವುದೇ ಭರವಸೆ ದೊರಕಲಿಲ್ಲ. ಆದ್ದರಿಂದ ಮುಷ್ಕರ ಅನಿವಾರ್ಯವಾಯಿತು ಎಂದು UFBU ಘಟಕವಾದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (AIBEA)ದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ತಿಳಿಸಿದ್ದಾರೆ.
ಇದೇ ವೇಳೆ UFBU ಘಟಕವಾದ ನ್ಯಾಷನಲ್ ಕಾನ್ಫೆಡರೇಶನ್ ಆಫ್ ಬ್ಯಾಂಕ್ ಎಂಪ್ಲಾಯೀಸ್ (NCBE) ಪ್ರಧಾನ ಕಾರ್ಯದರ್ಶಿ ಎಲ್. ಚಂದ್ರಶೇಖರ್ ಮಾತನಾಡಿ, ಈ ಆಂದೋಲನವು ಗ್ರಾಹಕರ ವಿರುದ್ಧವಲ್ಲ. ಇದು ಸುಸ್ಥಿರ, ಮಾನವೀಯ ಹಾಗೂ ಪರಿಣಾಮಕಾರಿ ಬ್ಯಾಂಕಿಂಗ್ ವ್ಯವಸ್ಥೆಗಾಗಿ ನಡೆಸುತ್ತಿರುವ ಹೋರಾಟವಾಗಿದೆ. ಸಮತೋಲಿತ ಕಾರ್ಯಪಡೆ ಆರ್ಥಿಕ ಸ್ಥಿರತೆಯನ್ನು ಬಲಪಡಿಸುತ್ತದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಐಷಾರಾಮಿ ಅಲ್ಲ, ಅದು ಆರ್ಥಿಕ ಹಾಗೂ ಮಾನವೀಯ ಅವಶ್ಯಕತೆಯಾಗಿದೆ ಎಂದು ಹೇಳಿದರು.
ಇನ್ನೊಂದೆಡೆ, ಯುಪಿಐ ಹಾಗೂ ಇಂಟರ್ನೆಟ್ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು ಗ್ರಾಹಕರಿಗೆ ಲಭ್ಯವಿರಲಿವೆ. ಆದರೆ ಕಳೆದ ಮೂರು ದಿನಗಳಿಂದ ಬ್ಯಾಂಕ್ ರಜೆ ಇದ್ದು, ಇಂದೂ ಮುಷ್ಕರ ನಡೆಯುತ್ತಿರುವುದರಿಂದ ಗ್ರಾಹಕರು ಅಸೌಕರ್ಯ ಎದುರಿಸುವಂತಾಗಿದೆ.

