ಸಾಗರ: ಇಲ್ಲಿನ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯ ಸಂಭ್ರಮದ ನಡುವೆ ದೇವಿಯ ದರ್ಶನಕ್ಕೆ ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ವಿಧಾನಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೆ ಕುಸಿದು ಬಿದ್ದು ಅಸ್ವಸ್ಥರಾದ ಘಟನೆ ನಡೆದಿದೆ.
ಮಾರಿಕಾಂಬಾ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ದೇವಿಯ ಆಶೀರ್ವಾದ ಪಡೆಯಲು ಕಾಗೋಡು ತಿಮ್ಮಪ್ಪ ಅವರು ತೆರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ತಕ್ಷಣ ನೆರವಿಗೆ ಧಾವಿಸಿ ಅವರನ್ನು ಸಾಗರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೂಲಗಳ ಪ್ರಕಾರ, ಕಾಗೋಡು ತಿಮ್ಮಪ್ಪ ಅವರಿಗೆ ಹಿಂದಿನಿಂದಲೂ ಮಧುಮೇಹ ಸಮಸ್ಯೆ ಇದ್ದು, ಇಂದು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದಾರೆ. ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
ಕಾಗೋಡು ತಿಮ್ಮಪ್ಪ ಅವರು ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದು, ರಾಜ್ಯ ವಿಧಾನಸಭೆಯ ಸಭಾಪತಿಯಾಗಿ ಸೇವೆ ಸಲ್ಲಿಸಿದ್ದವರು.

