ನವದೆಹಲಿ, ಮಾ.24: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾರ್ಚ್ 25ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ಸಂಸತ್ ಸಂಕೀರ್ಣದಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಇರಾನ್, ಇಸ್ರೇಲ್ ಹಾಗೂ ಅಮೆರಿಕಾ ನಡುವಿನ ಸಂಘರ್ಷದಿಂದ ಭಾರತ ಮತ್ತು ಜಗತ್ತಿಗೆ ಎದುರಾಗಿರುವ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ.
ಇದರ ಮಧ್ಯೆ ಇಂದು ಮುಂಜಾನೆ ರಕ್ಷಣಾ ಸನ್ನದ್ಧತೆಯನ್ನು ಪರಿಶೀಲಿಸಲು ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಸಭೆಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆಯ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಹಾಗೂ ಡಿಆರ್‌ಡಿಒ ಅಧ್ಯಕ್ಷ ಸಮೀರ್ ಕಾಮತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಪಶ್ಚಿಮ ಏಷ್ಯಾದ ಸಂಘರ್ಷ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪ್ರಮುಖ ವ್ಯಾಪಾರ ಮಾರ್ಗವಾದ ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸಾಗಣೆ ಮೇಲೆ ಪರಿಣಾಮ ಬೀರಿದೆ. ಫೆಬ್ರವರಿ 28ರಂದು ನಡೆದ ದಾಳಿಯಲ್ಲಿ ಅಲಿ ಖಮೇನಿ ಹತ್ಯೆಯಾದ ಬಳಿಕ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂಬ ವರದಿಗಳು ಸೂಚಿಸಿವೆ.
ಇದಕ್ಕೆ ಪ್ರತಿಯಾಗಿ ಇರಾನ್ ಗಲ್ಫ್ ಪ್ರದೇಶದಲ್ಲಿ ಅಮೆರಿಕಾ ಮತ್ತು ಇಸ್ರೇಲ್ ಸಂಬಂಧಿತ ಆಸ್ತಿಗಳನ್ನು ಗುರಿಯಾಗಿಸಿಕೊಂಡಿದ್ದು, ಜಾಗತಿಕ ಇಂಧನ ಮಾರುಕಟ್ಟೆ ಹಾಗೂ ಆರ್ಥಿಕ ಸ್ಥಿರತೆಗೆ ಹೊಡೆತ ನೀಡಿದೆ.
ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿ ಆತಂಕಕಾರಿ ಎಂದು ಹೇಳಿ, ಈ ಸಂಘರ್ಷವು ಕೇವಲ ಆರ್ಥಿಕ ಅಥವಾ ರಾಷ್ಟ್ರೀಯ ಭದ್ರತೆಗಷ್ಟೇ ಸೀಮಿತವಾಗದೇ ಮಾನವೀಯ ಸವಾಲನ್ನೂ ಉಂಟುಮಾಡುತ್ತಿದೆ ಎಂದು ಎಚ್ಚರಿಸಿದ್ದಾರೆ.
ಭಾರತದ ಕಚ್ಚಾ ತೈಲ ಹಾಗೂ ಅನಿಲ ಅವಶ್ಯಕತೆಗಳ ಬಹುಪಾಲು ಪಶ್ಚಿಮ ಏಷ್ಯಾದ ದೇಶಗಳಿಂದಲೇ ಪೂರೈಸಲಾಗುತ್ತಿರುವುದರಿಂದ ಈ ಪರಿಸ್ಥಿತಿ ಹೆಚ್ಚಿನ ಕಳವಳಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ, ಭಾರತವು ಇರಾನ್, ಇಸ್ರೇಲ್ ಮತ್ತು ಅಮೆರಿಕಾ ದೇಶಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯನ್ನು ಪುನಃಸ್ಥಾಪಿಸುವುದು ಭಾರತದ ಪ್ರಮುಖ ಗುರಿಯಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಹಾರ್ಮುಜ್ ಜಲಸಂಧಿ ತೆರೆಯುವಂತೆ ಕರೆ ನೀಡಿದ ಅವರು, ನಾಗರಿಕರು ಹಾಗೂ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ವಿರೋಧಿಸುತ್ತದೆ. ಹಡಗುಗಳ ಸುರಕ್ಷಿತ ಸಂಚಾರಕ್ಕಾಗಿ ಭಾರತ ನಿರಂತರ ಪ್ರಯತ್ನಗಳನ್ನು ಮುಂದುವರಿಸುತ್ತಿದೆ ಎಂದು ತಿಳಿಸಿದ್ದಾರೆ.

