ಬೆಂಗಳೂರು : ರಾಜ್ಯದ ಕರಾವಳಿಯಲ್ಲಿ ಸೆ.3ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲವು ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯ ದಿನದಿಂದಲೇ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಹಿನ್ನೆಲೆ ಆ.29ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಸೇರಿದಂತೆ ಖಾಸಗಿ ಅನುದಾನಿತ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿ ದಕ ಜಿಲ್ಲಾಧಿಕಾರಿ ದರ್ಶನ್ ಎಚ್ .ವಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ನಡುವೆ, ಆ.29 ಮತ್ತು ಆ.30ರಂದು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆ.29ರಂದು ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಹಾಗೂ ಗದಗ, ವಿಜಯಪುರ, ಯಾದಗಿರಿ ಮತ್ತು ಹಾಸನ ಜಿಲ್ಲೆಗೆ ಯೆಲ್ಲೊಅಲರ್ಟ್ ನೀಡಲಾಗಿದೆ.
ಬೆಂಗಳೂರಿನ ಬಹುತೇಕ ಕಡೆ ಬುಧವಾರ ಸಂಜೆ ಭಾರಿ ಮಳೆಯಾಗಿದೆ. ಎಚ್ಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

