ಬೆಂಗಳೂರು : ಅಂಡಮಾನ್ ಮತ್ತು ಬಂಗಾಳ ಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಹಿನ್ನೆಲೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಗಾಲದ ಲಕ್ಷಣಗಳು ಕಾಣಿಸಿಕೊಂಡಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳು ಮುಂದಿನ 5 ದಿನಗಳವರೆಗೆ ಗುಡುಗು ಸಹಿತ ಮತ್ತು ಬಿರುಗಾಳಿಯ ಜೊತೆ ನಿರಂತರ ಮಳೆಬರಲಿದೆ ಎಂದು ಐಎಂಡಿ ವಿಜ್ಞಾನಿ ಅಖಿಲ ಶ್ರೀವಾಸ್ತವ ಹೇಳಿದ್ದಾರೆ.
ರಾಜ್ಯದಲ್ಲಿ ದಿನ ಭಾರಿ ಮಳೆ :
ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಇಂದಿನಿಂದ ಎರಡು ದಿನಗಳವರೆಗೆ ರಾಜ್ಯಕ್ಕೆ ಭಾರಿ ಮಳೆ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.
ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

