ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗಲಿದೆ. ವಾಯುಭಾರ ಕುಸಿತದಿಂದ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 30ರ ವೇಳೆಗೆ ಚಂಡಮಾರುತ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಮಳೆ ಸ್ವಲ್ಪ ಚುರುಕಾಗಿದ್ದು, ರಾಜ್ಯದಲ್ಲಿ ಒಂದು ವಾರದ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿಯಲ್ಲಿ ಇಂದು (ಭಾನುವಾರ) ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಐಎಂಡಿಯ ಮಾಹಿತಿಯಂತೆ ಇಂದು ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಸಮುದ್ರ ಪ್ರಕ್ಷುಬ್ಧವಾಗಿರುತ್ತದೆ.
ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ಸೋಮವಾರ ಹಗುರ ಮಳೆಯಾಗಲಿದೆ. ಆದರೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ.
ಹಾಗೇ, ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

