ಬೆಂಗಳೂರು, ಡಿಸೆಂಬರ್ 24, 2025: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ವಿಚಾರದಲ್ಲಿ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆಯೋ ಅದೇ ಅಂತಿಮವಾಗಿರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಯಾವುದೇ ಗೊಂದಲ ಉಂಟಾಗಬಾರದೆಂಬ ಉದ್ದೇಶದಿಂದಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು. ಹೈಕಮಾಂಡ್‌ನ ನಿರ್ಧಾರವನ್ನು ಪಕ್ಷದ ಎಲ್ಲರೂ ಗೌರವಿಸಬೇಕಾಗುತ್ತದೆ ಎಂದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಅನುಮತಿ ನಿರಾಕರಿಸಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಶಿಫಾರಸುಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿದರು. ಈವರೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೆಎಸ್‌ಸಿಎ ಕೈಗೊಂಡಂತೆ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಸಚಿವ ಕೆ.ಎನ್. ರಾಜಣ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬರೆದಿರುವ ಪತ್ರದ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಆ ಪತ್ರವನ್ನು ನನಗೆ ಇನ್ನೂ ತೋರಿಸಿಲ್ಲ. ಪತ್ರವನ್ನು ಪರಿಶೀಲಿಸಿದ ನಂತರವೇ ಈ ಕುರಿತು ಮಾತನಾಡುತ್ತೇನೆ ಎಂದು ತಿಳಿಸಿದರು.

