ಬೆಳ್ತಂಗಡಿ: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ ಎಂದು ತಿಳಿದು ಬಂದಿದೆ.
ಪುತ್ತೂರು ಸಹಾಯಕ ಕಮಿಷನರ್ ಅವರ ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸಹಾಯಕ ಕಮಿಷನರ್ ನೀಡಿರುವ ಆದೇಶವು ಸಮರ್ಪಕವಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಇದೇ ವೇಳೆ, ಪ್ರಕರಣದ ಮರು ವಿಚಾರಣೆಯನ್ನು 21 ದಿನಗಳೊಳಗೆ ನಡೆಸಿ ಸೂಕ್ತ ಆದೇಶ ನೀಡುವಂತೆ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ನ್ಯಾಯಾಲಯ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.

