ಚಿಕ್ಕಬಳ್ಳಾಪುರ, ಡಿ.25: ಚಿಕ್ಕಬಳ್ಳಾಪುರ ನಗರದ ಅಜ್ಜವಾರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ನಡೆದಿದೆ. ರಾತ್ರಿ ಸುಮಾರು 9.30ರ ವೇಳೆಗೆ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನರಸಿಂಹಮೂರ್ತಿ, ಅರುಣ್, ಮನೋಜ್ ಹಾಗೂ ನಂದೀಶ್ ಎಂಬ ಯುವಕರಿಗೆ ಅತಿವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿಯಂತೆ, ಯುವಕರು ನಿಧಾನವಾಗಿ ಬಲ ತಿರುವು ತೆಗೆದುಕೊಳ್ಳುತ್ತಿದ್ದಾಗ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಟಿಪ್ಪರ್ ಲಾರಿ ಚಾಲಕನ ವಿರುದ್ಧ ತನಿಖೆ ಮುಂದುವರೆಸಿದ್ದಾರೆ. ಈ ದುರ್ಘಟನೆಯಿಂದ ಸ್ಥಳೀಯರಲ್ಲಿ ಶೋಕದ ವಾತಾವರಣ ಮನೆಮಾಡಿದೆ.
ಶಾಸಕ ಪ್ರದೀಪ್ ಈಶ್ವರ್ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ :
ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು, ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಈ ನಡೆದಿದೆ. ವೇಗವಾಗಿ ಬಂದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಿದರು. ಅಪಘಾತದ ಮಾಹಿತಿ ಲಭ್ಯವಾದ ಕೂಡಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಅಲ್ಲದೆ, ಮೃತರ ಕುಟುಂಬದ ಸದಸ್ಯರಿಗೆ ಡಿಸಿ ತಾಲೂಕು ಕಚೇರಿಯಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಪ್ರದೀಪ್ ಈಶ್ವರ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆಯೂ ಹೇಳಿದ್ದಾರೆ. ಅಪಘಾತದಲ್ಲಿ ಒಬ್ಬ ಯುವಕ ಮದುವೆಯಾಗಿ 8 ತಿಂಗಳಾಗಿದ್ದು, ಮತ್ತೊಬ್ಬ ಯುವಕನ ಸಹೋದರಿ ದೂರದ ಊರಿನಲ್ಲಿ ಓದುತ್ತಿರುವ ಕಾರಣ ಆಕೆಯನ್ನು ಕರೆಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

