ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರುವುದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ ಸುಮಾರು 884 ಕೋಟಿ ರೂಪಾಯಿ ನಷ್ಟ ಉಂಟುಮಾಡಿರುವುದಾಗಿ ತೀರ್ಪಿನಲ್ಲಿ ಉಲ್ಲೇಖವಾಗಿದೆ.
ಈ ಹಿನ್ನೆಲೆಯಲ್ಲಿ, ಉಂಟಾದ ಆರ್ಥಿಕ ನಷ್ಟವನ್ನು ರೆಡ್ಡಿಯಿಂದಲೇ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದ ಆಧಾರದ ಮೇಲೆ ರಾಜ್ಯ ಸರ್ಕಾರವು ಪ್ರಕರಣ ಸಂಬಂಧಿಸಿದಂತೆ ಸಮಗ್ರ ವರದಿ ತರಿಸಿಕೊಳ್ಳಲು ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಸಂಡೂರು ಕ್ಲಸ್ಟರ್‌ನಲ್ಲಿ ನಡೆದ ಗಣಿಗಾರಿಕೆ ಚಟುವಟಿಕೆಗಳ ಕುರಿತು ವಿವರವಾದ ವರದಿ ಸಲ್ಲಿಸಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.

