ನವದೆಹಲಿ : ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ಒಡಿಶಾ, ಮೇಘಾಲಯ, ಅಸ್ಸಾಂ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿದಂತೆ ದೇಶದ ಹಲವೆಡೆ ಮುಂದಿನ ದಿನಗಳಲ್ಲಿ ಭಾರಿ ಮಳೆ, ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಕರ್ನಾಟಕ, ಗೋವಾ ಮತ್ತು ಕೇರಳ ರಾಜ್ಯಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಕಾರವಾರ, ಅಂಕೋಲಾ, ಕುಂಟಾ, ಹೊನ್ನಾವರ, ಭಟ್ಕಳ, ಸಿರ್ಸಿ, ಸಿದ್ದಾಪುರ, ಎಲ್ಲಾಪುರ, ದಾಂಡೇಲಿ ಮತ್ತು ಜೊಯಿಡಾ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜುಲೈ 17 ಮತ್ತು 18 ರಂದು ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ಜುಲೈ 17ರವರೆಗೆ ಭಾರಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಜುಲೈ 16ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ.