ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ರಾಜ್ಯ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.
ಹೈಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾ. ನಾಗಪ್ರಸನ್ನ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಮಿತೆ 218ರಡಿ ರಾಜ್ಯಪಾಲರು ನೀಡಿದ್ದ ಅಭಿಯೋಜನೆ ಮತ್ತು ತನಿಖೆಯ ಪೂರ್ವಾನುಮತಿಯನ್ನು ಎತ್ತಿಹಿಡಿದಿದ್ದಾರೆ.
17ಎ ಅಡಿ ಪೊಲೀಸ್ ಅಧಿಕಾರಿಯೇ ಪೂರ್ವಾನುಮತಿಗೆ ಅರ್ಜಿ ಸಲ್ಲಿಸಬೇಕು ಎಂಬ ಕಡ್ಡಾಯ ನಿಯಮಗಳಿಲ್ಲ. ಖಾಸಗಿ ದೂರಿನ ಸಂದರ್ಭಗಳಲ್ಲಿ ಇದಕ್ಕೆ ವಿನಾಯಿತಿ ಇದೆ. ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರ ಬಳಸಿ ನಡೆಸಿರುವ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿಲ್ಲ ಎಂದು ಪೀಠ ಹೇಳಿದೆ.
ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಹೈಕೋರ್ಟ್‌ನ ಏಕ ಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ.ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದರು.
ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

