ಕಾಲಿವುಡ್ ನಟ, ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. ಶನಿವಾರ (ಸೆಪ್ಟೆಂಬರ್ 27) ಕರೂರಿನಲ್ಲಿ ನಡೆದ ಈ ಘಟನೆಯಲ್ಲಿ ಹಲವರು ನಿಧನರಾಗಿದ್ದಾರೆ. ಈ ಭೀಕರ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 39ಕ್ಕೆ ಏರಿಕೆ ಆಗಿದೆ. ತಮಿಳುನಾಡಿನ ಕರೂರಿನಲ್ಲಿ ದಳಪತಿ ವಿಜಯ್ ಅವರು ರಾಯಕೀಯ ರ‍್ಯಾಲಿ ಹಮ್ಮಿಕೊಂಡಿದ್ದರು. ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಉಂಟಾದ ಕಾಲ್ತುಳಿತದಿಂದ ಈ ದುರಂತ ಸಂಭವಿಸಿದೆ. ಸಾವಿನ ಸಂಖ್ಯೆ ( ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
ದಳಪತಿ ವಿಜಯ್ ಅವರಿಗೆ ಅಪಾರ ಜನಪ್ರಿಯತೆ ಇದೆ. ಅವರು ಎಲ್ಲಿಯೇ ಹೋದರೂ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಾರೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ವಿಜಯ್ ಅವರು ತಮಿಳಿಗ ವಿಟ್ರಿ ಕಳಗಂ ಪಕ್ಷದ ಪ್ರಚಾರಕ್ಕೆ ಹೆಚ್ಚು ಗಮನ ನೀಡಿದ್ದಾರೆ. ಕರೂರು ಜಿಲ್ಲೆಯಲ್ಲಿ ಅವರು ದೊಡ್ಡ ರ‍್ಯಾಲಿ ನಡೆಸಿದರು. ಜನರನ್ನು ನಿಯಂತ್ರಿಸಲು ಸಾಧ್ಯವಾಗದೇ ಪರಿಸ್ಥಿತಿ ಕೈ ಮೀರಿತು.
ಕರೂರು ಕಾಲ್ತುಳಿದಲ್ಲಿ 6 ಮಕ್ಕಳು ಸೇರಿದಂತೆ ಈವರೆಗೂ ಒಟ್ಟು 39 ಜನರು ಮೃತರಾಗಿದ್ದಾರೆ. 40ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರ‍್ಯಾಲಿಯಲ್ಲಿ ಅಂದಾಜು 60 ಸಾವಿರ ಜನರು ಸೇರಿದ್ದರು ಎನ್ನಲಾಗಿದೆ. ದಳಪತಿ ವಿಜಯ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಕಾರಣಕ್ಕೆ ಎಲ್ಲರೂ ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಯಿತು.
ಈ ಕಾಲ್ತುಳಿತ ಸುದ್ದಿ ತಿಳಿದ ಕೂಡಲೇ ಅನೇಕ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಅರವಿಂದ್ ಕೇಜ್ರಿವಾಲ್, ಎಂ.ಕೆ. ಸ್ಟಾಲಿನ್ ಮುಂತಾದವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಕಾಲ್ತುಳಿತಕ್ಕೆ ನಿಜವಾಗಿ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಮೃತರ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ‘ತಮಿಳುನಾಡಿನ ಯಾವುದೇ ರಾಜಕೀಯ ರ‍್ಯಾಲಿಯಲ್ಲಿ ಇಂಥ ದೊಡ್ಡ ದುರಂತ ಎಂದಿಗೂ ಸಂಭವಿಸಿರಲಿಲ್ಲ’ ಎಂದು ಸ್ಟಾಲಿನ್ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.
ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ವಿಜಯ್
ತಮಿಳುನಾಡಿನ ಕರೂರು ಪಟ್ಟಣದಲ್ಲಿ ಕಾಲ್ತುಳಿತ ಉಂಟಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಚಿತ್ರನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ವಿಜಯ್, ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಗಾಯಗೊಂಡಿರುವ ಕುಟುಂಬಗಳಿಗೂ ಚಿಕಿತ್ಸೆಗಾಗಿ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ವಿಜಯ್ ತಿಳಿಸಿದ್ದಾರೆ.

ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರೂರು ಪಟ್ಟಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಪ್ರತಿ ಕುಟುಂಬಗಳಿಗೆ 20 ಲಕ್ಷ ರೂ. ಪರಿಹಾರ ನೀಡುತ್ತೇನೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೂ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಮಧ್ಯರಾತ್ರಿಯೇ ಕರೂರ್ಗೆ ಸಿಎಂ ಭೇಟಿ
ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಚಾರ ರ‍್ಯಾಲಿಯನ್ನು ಆಯೋಜಿಸಿದ್ದರು. ಈ ವೇಳೆ ವಿಜಯ್ನನ್ನು ನೋಡಲು ಹತ್ತಾರು ಸಾವಿರ ಜನ ಸೇರಿದ್ದರು. ವಿಜಯ್ ಭಾಷಣ ಆರಂಭಿಸುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಹಲವು ಜನ ಮೂರ್ಛೆ ತಪ್ಪಿದ್ದರು.
ತಕ್ಷಣ ಅವರನ್ನು ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಜಯ್ ಕೂಡ ಅರ್ಧದಲ್ಲೇ ಭಾಷಣ ಮುಗಿಸಿ ಆ ಸ್ಥಳದಿಂದ ಹೊರಟಿದ್ದರು. ಕಾಲ್ತುಳಿತದಿಂದ ಇದುವರೆಗೂ ಚಿಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ 39 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ. ನಿನ್ನೆ ಮಧ್ಯರಾತ್ರಿಯೇ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಕರೂರಿನ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದು, ಈ ಘಟನೆಯನ್ನು ಅತ್ಯಂತ ಭಯಾನಕ ಎಂದಿದ್ದಾರೆ. ಕಾಲ್ತುಳಿತದ ಕುರಿತು ಮಾತನಾಡಿದ ಅವರು, “ಇದುವರೆಗೆ 39 ಜನರು ಸಾವನ್ನಪ್ಪಿದ್ದಾರೆ. ನಮ್ಮ ರಾಜ್ಯದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಪ್ರಾಣ ಕಳೆದುಕೊಂಡಿಲ್ಲ. ಭವಿಷ್ಯದಲ್ಲಿ ಇಂತಹ ದುರಂತ ಎಂದಿಗೂ ಸಂಭವಿಸಬಾರದು. ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದಿದ್ದಾರೆ.
“ಪ್ರಾಣ ಕಳೆದುಕೊಂಡವರಿಗೆ ನಾನು ಭಾರವಾದ ಹೃದಯದಿಂದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸುವಂತೆ ನಾನು ಆದೇಶಿಸಿದ್ದೇನೆ” ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

