ಬೆಂಗಳೂರು: 2026ರ ನವೆಂಬರ್‌ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಹೆಸರನ್ನು ಅಂತಿಮವಾಗಿ ಅನುಮೋದಿಸಿದ್ದಾರೆ.
ಪಟ್ಟಿಯ ಪ್ರಕಾರ, ಪಶ್ಚಿಮ ಪದವೀಧರ ಕ್ಷೇತ್ರದಿಂದ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.
ಇದೇ ಸಂದರ್ಭದಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಎಂಎಲ್‌ಸಿ ಪುಟ್ಟಣ್ಣ ಅವರು ಹೈಕಮಾಂಡ್ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ನನ್ನ ಮೇಲೆ ವಿಶ್ವಾಸವಿಟ್ಟು ಅಭ್ಯರ್ಥಿಯಾಗಿ ಘೋಷಿಸಿರುವುದಕ್ಕೆ ಮಾನ್ಯ ಸೋನಿಯಾ ಗಾಂಧಿ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕತ್ವ ಹಾಗೂ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
ಶಿಕ್ಷಕರ ಹಕ್ಕುಗಳ ರಕ್ಷಣೆ, ಶಿಕ್ಷಣದ ಗೌರವ ಹೆಚ್ಚಿಸುವುದು ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡುವ ದಿಶೆಯಲ್ಲಿ ಪಕ್ಷದ ಮಾರ್ಗದರ್ಶನದಲ್ಲಿ ಪೂರ್ಣ ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

