ಬೆಂಗಳೂರು, ಡಿಸೆಂಬರ್ 24: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿನ 10 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ದಾಖಲೆಗಳು ಮತ್ತು ಆಸ್ತಿ ವಿವರಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ.
ಲೋಕಾಯುಕ್ತ ಪೊಲೀಸರು ಬೆಂಗಳೂರಿನ ಹಲಸೂರುದಲ್ಲಿರುವ ನಿವಾಸ ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನಲ್ಲಿನ ಎರಡು ಕಾಫಿ ಎಸ್ಟೇಟ್‌ಗಳು ಹಾಗೂ ಹೆಚ್.ಡಿ.ಕೋಟೆಯಲ್ಲಿನ ಒಂದು ರೆಸಾರ್ಟ್ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗಿನ ಜಾವ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಎಲ್ಲಾ 10 ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ, ಹಣಕಾಸು ವ್ಯವಹಾರಗಳು ಹಾಗೂ ಆಸ್ತಿ ವಿವರಗಳ ಸಂಗ್ರಹ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದ್ದು, ದಾಳಿ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

