ಉಡುಪಿ, ಮಾ.16: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಗ್ಯಾಸ್ ಅಭಾವದ ಆತಂಕ ಇರುವ ನಡುವೆಯೇ ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದರು.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಬ್ಬಂದಿ ನಿರಂತರವಾಗಿ ನೀರು ಹಾಯಿಸಿದರು.
ಇದೀಗ ಮಂಗಳೂರಿನಿಂದ ಮತ್ತೊಂದು ಟ್ಯಾಂಕರ್ ತರಿಸಿ ಪಲ್ಟಿಯಾದ ಟ್ಯಾಂಕರ್‌ನಲ್ಲಿದ್ದ ಅನಿಲವನ್ನು ಸುರಕ್ಷಿತವಾಗಿ ವರ್ಗಾಯಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ.

