ನವದೆಹಲಿ: ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ನಡೆಯಲಿರುವ ಚುನಾವಣೆಗೆ ಎನ್‌ಡಿಎ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ.
ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಎನ್‌ಡಿಎ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಲಿದ್ದಾರೆ. ಇಂದು ಸಂಜೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಹೆಸರನ್ನು ಅನುಮೋದಿಸಲಾಯಿತು. ಸಂಸದೀಯ ಸಮಿತಿಯಲ್ಲಿ ಮೊದಲು ರಾಧಾಕೃಷ್ಣನ್ ಅವರ ಹೆಸರನ್ನು ಚರ್ಚಿಸಲಾಯಿತು. ಬಳಿಕ ಸಮಿತಿಯ ಎಲ್ಲಾ ಸದಸ್ಯರು ರಾಧಾಕೃಷ್ಣನ್ ಹೆಸರಿಗೆ ಒಪ್ಪಿಗೆ ಸೂಚಿಸಿದರು.
ಉಪರಾಷ್ಟ್ರಪತಿ ಚುನಾವಣೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಎನ್‌ಡಿಎ ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಕೂಡ ಭಾಗವಹಿಸಿದ್ದರು.
ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದರು. ಈ ಕುರಿತು ಮಾಂಝಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಬೀದಿಗಳಿಂದ ಸಂಸತ್ತಿನವರೆಗೆ ನಾವು ಎನ್‌ಡಿಎ ಜೊತೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನಾಯಕರ ಲಿಸ್ಟ್‌ನಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, ಬಿಹಾರ ಗವರ್ನರ್ ಆರೀಫ್ ಮೊಹಮ್ಮದ್ ಖಾನ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಕ್ಕಿಂ ರಾಜ್ಯಪಾಲ ಓಂ ಮಾಡೂರ್, ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೆಸರುಗಳು ಮುಂಚೂಣಿಯಲ್ಲಿದ್ದವು.
ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಕಳೆದ ತಿಂಗಳು ದಿಢೀರನೇ ರಾಜೀನಾಮೆ ನೀಡಿದ ಬಳಿಕ ಅನೇಕ ರಾಜ್ಯಗಳ ರಾಜ್ಯಪಾಲರು, ಲೆಫ್ಟಿನೆಂಟ್ ಗವರ್ನ‌್ರಗಳು ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ರನ್ನು ಭೇಟಿಯಾಗಿದ್ದರು. ಉಪರಾಷ್ಟ್ರಪತಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಪ್ರಧಾನಿ ಮೋದಿ, ಅಮಿತ್ ಶಾಗೆ ಮನವಿ ಮಾಡಿದ್ದರು.
ಆದರೆ ಇದೀಗ ಎನ್‌ಡಿಎ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿದ್ದು, ನಾಳೆ ಇಂಡಿಯಾ ಮೈತ್ರಿ ಸಭೆ ನಡೆಸಿ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಆಯ್ಕೆ ಮಾ. ಸೆಪ್ಟೆಂಬರ್ 9 ಕ್ಕೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

