ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು. 94 ವರ್ಷದ ವಯಸ್ಸಿನವರಾಗಿದ್ದ ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ಕಳೆದ ಕೆಲದಿನಗಳಿಂದ ವಯಸೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಎಲ್ ಭೈರಪ್ಪ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.
ಮೂರು ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲೇ ಇದ್ದ ಎಸ್‌ಎಲ್ ಭೈರಪ್ಪ ಅವರು ಹಿರಿಯ ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಮನೆಯಲ್ಲಿ ವಾಸವಾಗಿದ್ದರು, 94 ವರ್ಷ ವಯಸ್ಸಿನ ಅವರು ಕಳೆದ ಕೆಲ ಸಮಯದಿಂದ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
ಭೈರಪ್ಪ ಅವರ ಪೂರ್ಣ ಹೆಸರು ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂದು. ಕನ್ನಡ ಸಾಹಿತ್ಯ ಲೋಕದ ದಿಗ್ಗಜ ವ್ಯಕ್ತಿಯಾಗಿದ್ದರು. 1931ರ ಆಗಸ್ಟ್ 20ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದರು. ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಸಣ್ಣ ವಯಸ್ಸಿನಲ್ಲೇ ತಮ್ಮ ತಾಯಿಯ ಧೀಮಂತಿಕೆಯನ್ನು ಭೈರಪ್ಪ ಅವರು ಮೈಗೂಡಿಸಿ ಕೊಂಡು ಬೆಳೆದರು.
ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. 1961 ರಲ್ಲಿ `ಧರ್ಮಶ್ರೀ’ ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ.
ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. `ಪರ್ವ’ ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ.

