ಬೆಂಗಳೂರು : ರಾಜ್ಯದ ಸುಮಾರು ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆಯ ತಾಂತ್ರಿಕ ಸಮಸ್ಯೆಗಳಿಂದ ಭಾರೀ ವಾಹನಗಳ ಸಂಚಾರಕ್ಕೆ ಕಳೆದ ಎರಡು ವರ್ಷಗಳಿಂದ ನಿರ್ಬಂಧವನ್ನು ಇಂದು ತೆರವುಗೊಳಿಸಿದ್ದು ಇಂದಿನಿಂದ ಎಲ್ಲಾ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಟ್ರಾಫಿಕ್ ಸಮಸ್ಯೆಯಲ್ಲಿ ಸಿಲುಕಿ ಹೈರಾಣರಾಗಿದ್ದ ದಿನನಿತ್ಯ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನಗಳ ಚಾಲಕರು ನಿಟ್ಟುಸಿರುಬಿಟ್ಟಿದ್ದಾರೆ.
4.2 ಕಿ.ಮೀ ಉದ್ದದ ಮೇಲ್ಸೇತುವೆಯಲ್ಲಿ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರಿಂದ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗುತ್ತಿತ್ತು. ಫ್ಲೇಓವರ್ನಲ್ಲಿ ಪ್ರಿಸ್ಟೈಡ್ ಕೇಬಲ್ಗಳ ಹಾಳಾದ ಹಿನ್ನಲೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಇದೀಗ ಹೊಸದಾಗಿ ಕೇಬಲ್ಗಳನ್ನು ಅಳವಡಿಸಿದ್ದು, ಎಲ್ಲಾ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.
ಮೇಲ್ಸೇತುವೆಯ ವಿಶೇಷ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರೀ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ. 2021 ಡಿಸೆಂಬರ್ ತಿಂಗಳಿನಿಂದಲೂ ಪೀಣ್ಯ ಮೇಲ್ಸೇತುವೆಯಲ್ಲಿ ಸಮಸ್ಯೆ ಉಂಟಾಗಿದ್ದ ಕಾರಣ ಇದರಿಂದ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕದ ಭಾಗದ ಬಸ್ಗಳು ಟ್ರಾಫಿಕ್ ಸುಳಿಯಲ್ಲಿ ಒದ್ದಾಡಬೇಕಿತ್ತು. ವಾರದಲ್ಲಿ ಒಂದು ದಿನ ಬಿಟ್ಟು ಉಳಿದ 6 ದಿನ ಫ್ಲೈ ಓವರ್ ಮೇಲೆ ಓಡಾಟಕ್ಕೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ.