ಬೆಂಗಳೂರು : ಮಹಿಳಾ ದೌರ್ಜನ್ಯದ ಸಂದರ್ಭದಲ್ಲೂ ರಾಜ್ಯದ ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನರು ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದು ಜನವಿರೋಧಿ ಸರ್ಕಾರ ಎಂದು ಟೀಕಿಸಿದರು.
ರಾಜ್ಯದ ಚುಕ್ಕಾಣಿ ಹಿಡಿದ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುವಾಗ ರಾಜ್ಯದ ಜನರ ಪರವಾಗಿ ಹೋರಾಡುವುದು ನಮ್ಮ ಕರ್ತವ್ಯ.ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಮುಖ್ಯಮಂತ್ರಿ, ಗೃಹ ಸಚಿವ, ಸಚಿವರ ನಡವಳಿಕೆ ಪ್ರಮುಖವಾಗುತ್ತದೆ ಎಂದು ವಿಶ್ಲೇಷಿಸಿದರು.
ರಾಜ್ಯದಲ್ಲಿ ವಾಲೀಕಿ ನಿಗಮದ ಹಗರಣ, ಮೂಡ ಹಗರಣದ ವಿರುದ್ಧ ಹೋರಾಟಗಳು ನಡೆದಿವೆ. ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಯ ಆರಂಭವೇ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಇವರು ಚಾಲನೆಯನ್ನೇ ಕೊಟ್ಟಿಲ್ಲ. ಲೋಕಸಭಾ ಚುನಾವಣೆಯ ಮತದಾನಕ್ಕೆ 3-4 ದಿನಗಳ ಮೊದಲು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 3 ಕಂತುಗಳನ್ನು ಬಿಡುಗಡೆ ಮಾಡಿದ್ದರು. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ಬಂದಾಗ ಮತ್ತೆ ಕಂತು ಬಿಡುಗಡೆ ಆಗಲಿದೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರು- ಮೈಸೂರು ಪಾದಯಾತ್ರೆ ನನಗೆ ರಾಜ್ಯಾಧ್ಯಕ್ಷನಾಗಿ ಮೊದಲ ಆಂದೋಲನ. ಪಾದಯಾತ್ರೆಗೆ ಹೊಸ ಹುಮಸ್ಸನ್ನು ಮಹಿಳಾ ಮೋರ್ಚಾವೂ ನೀಡಿತ್ತು ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಹೋರಾಟ ಎಂದೊಡನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಎಂದು ಪ್ರಕಟಿಸಿದಾಗ ನಮಗೂ ಆತಂಕ ಇತ್ತು. ಏಕೆಂದರೆ ತಯಾರಿ ಆಗಿರಲಿಲ್ಲ. ಆದರೂ ಯಶಸ್ವಿಯಾಯಿತು.
ಆಡಳಿತ ಪಕ್ಷದವರು ಆತಂಕ ಪಟ್ಟುಕೊಂಡು ನಮ ಪಾದಯಾತ್ರೆ ಶುರು ಆಗುವುದಕ್ಕೂ ಮುನ್ನವೇ ಜನಾಂದೋಲನ ಮಾಡಿದ್ದರು.
ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಇಷ್ಟು ಆತಂಕಕ್ಕೆ ಗುರಿ ಮಾಡಿದ ಸಂದರ್ಭ ಯಾವತ್ತೂ ಇರಲಿಲ್ಲ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು. ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕೆ. ಮಂಜುಳ ಅವರು ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ನಿರ್ದಾಕ್ಷಿಣ್ಯ ಕ್ರಮ ಅಗತ್ಯ. ಆಗ ದುಷ್ಟರು, ದುರುಳರು, ಕ್ರಿಮಿಗಳು ಮನೆ ಸೇರಿಕೊಳ್ಳುತ್ತಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಮತ್ತು ಮಹಿಳಾ ಮೋರ್ಚಾ ರಾಜ್ಯ ಉಸ್ತುವಾರಿ ಸೋನಲ್ ಬೆನ್ ಪಟೇಲ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಡಾ.ಶೋಭಾ, ಮಹಿಳಾ ಮೋರ್ಚಾ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.