ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಲಾರಿ ಪಲ್ಟಿಯಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಜನರಿಗೆ ಗಂಭೀರ ಗಾಯಗಳಾಗಿವೆ. ಈಗಾಗಲೇ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 3 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆಯಾದ ಬೆನ್ನಲ್ಲೇ ಕೇಂದ್ರದಿಂದಲೂ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಲಾಗಿದೆ.
ಇನ್ನು ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. “ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ” ಎಂದು ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಈ ದುರಂತದ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜ್ಯಸರ್ಕಾರದಿಂದ 3 ಲಕ್ಷ ರೂ. ಪರಿಹಾರ :
ರಾಜ್ಯದಲ್ಲಿ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟ ಒಟ್ಟು 14 ಜನರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

