ನವದೆಹಲಿ, ಡಿಸೆಂಬರ್ 30: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂಬ ವರದಿಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ–ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಎರಡೂ ದೇಶಗಳು ರಾಜತಾಂತ್ರಿಕ ಪ್ರಯತ್ನಗಳತ್ತ ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ರಷ್ಯಾದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳು ತೀವ್ರ ಕಳವಳ ಉಂಟುಮಾಡಿವೆ. ಎರಡೂ ದೇಶಗಳ ನಡುವಿನ ಯುದ್ಧವನ್ನು ಅಂತ್ಯಗೊಳಿಸಿ ಶಾಂತಿಯನ್ನು ಸಾಧಿಸಲು ಕೈಗೊಳ್ಳಲಾಗಿರುವ ರಾಜತಾಂತ್ರಿಕ ಪ್ರಯತ್ನಗಳು ಇಂತಹ ದಾಳಿಗಳಿಂದ ವ್ಯರ್ಥವಾಗುತ್ತವೆ. ಆದಷ್ಟು ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಲು ಎರಡೂ ರಾಷ್ಟ್ರಗಳು ಮುಂದಾಗಬೇಕು” ಎಂದು ಮನವಿ ಮಾಡಿದ್ದಾರೆ.
ಫೆಬ್ರವರಿ 2022ರಲ್ಲಿ ರಷ್ಯಾ–ಉಕ್ರೇನ್ ಯುದ್ಧ ಆರಂಭವಾದಾಗಿನಿಂದಲೇ ಪ್ರಧಾನಿ ಮೋದಿ ಸಂವಾದ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡುತ್ತಾ ಬಂದಿದ್ದಾರೆ.
ಇದಕ್ಕೂ ಮೊದಲು, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು, ಮಾಸ್ಕೋ ಮತ್ತು ಸೇಂಟ್ ಪೀಟರ್ಸ್‌ಬರ್ಗ್ ನಡುವಿನ ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ಅವರ ಅಧಿಕೃತ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂದು ಆರೋಪಿಸಿದ್ದರು. ಅವರ ಪ್ರಕಾರ, ಒಟ್ಟು 91 ಡ್ರೋನ್‌ಗಳನ್ನು ರಷ್ಯಾ ಸೇನೆ ತಡೆಹಿಡಿದು ಹೊಡೆದುರುಳಿಸಿದೆ.
ಈ ಘಟನೆಯಲ್ಲಿ ಯಾವುದೇ ಸಾವು–ನೋವು ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ ಎಂದು ಲಾವ್ರೊವ್ ಸ್ಪಷ್ಟಪಡಿಸಿದ್ದಾರೆ. ಆದರೆ, ಉಕ್ರೇನ್‌ನ ಈ ದಾಳಿಯ ಹಿನ್ನೆಲೆ ರಷ್ಯಾ ಶಾಂತಿ ಮಾತುಕತೆಗಳಿಗೆ ಒಪ್ಪಿಕೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಮರುಪರಿಶೀಲಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

