ಬೆಂಗಳೂರು: ಮನೆ ಕೆಲಸದ ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲದೇ, ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಶಿಕ್ಷೆಯ ಆದೇಶವನ್ನು ರದ್ದುಪಡಿಸಬೇಕು, ಪ್ರಕರಣದಿಂದ ಅರ್ಜಿದಾರರನ್ನು ಖುಲಾಸೆಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಇತ್ತೀಚೆಗಷ್ಟೇ ಅರ್ಜಿ ಸಲ್ಲಿಕೆಯಾಗಿದ್ದು, ಇನ್ನೂ ವಿಚಾರಣೆಗೆ ದಿನಾಂಕ ನಿಗದಿಯಾಗಬೇಕಾಗಿದೆ.
ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಅರ್ಜಿದಾರ ಪ್ರಜ್ವಲ್ ರೇವಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ಆಗಸ್ಟ್ 2 ರಂದು ಜೀವನ ಪರ್ಯಂತ ಜೈಲು ಶಿಕ್ಷೆ ಮತ್ತು 11.60 ಲಕ್ಷ ದಂಡವನ್ನು ವಿಧಿಸಿತ್ತು. ಇದರಲ್ಲಿ ಸಂತ್ರಸ್ತೆಗೆ 11.25 ಲಕ್ಷವನ್ನು ಪರಿಹಾರದ ರೂಪದಲ್ಲಿ ನೀಡಬೇಕು. ಇನ್ನುಳಿದ ಬಾಕಿ ಹಣವನ್ನು ಸರ್ಕಾರದ ಖಾತೆಗೆ ಜಮೆ ನೀಡಲು ನಿರ್ದೇಶನ ನೀಡಿತ್ತು. ಈ ತೀರ್ಪಿನ ಆದೇಶವನ್ನು ರದ್ದುಪಡಿಸಲು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

