ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಿದ್ದ ರಾಷ್ಟ್ರಪತಿ, ಸುಮಾರು ಮೂರು ತಿಂಗಳ ಬಳಿಕ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಮಳವಳ್ಳಿಯಲ್ಲಿ ಡಿಸೆಂಬರ್ 16ರಿಂದ 21ರವರೆಗೆ ಆಯೋಜಿಸಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವದ ಅಂಗವಾಗಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದ್ದು, ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮದ ವೇಳಾಪಟ್ಟಿಯಂತೆ, ಡಿಸೆಂಬರ್ 16ರ ಮಧ್ಯಾಹ್ನ 2.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ತೆರಳಿ, ಸುತ್ತೂರು ಮಠದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ಹಿಂದಿರುಗಲಿರುವ ರಾಷ್ಟ್ರಪತಿ, ರಾತ್ರಿ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿಸೆಂಬರ್ 17ರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ತಿರುಪತಿಗೆ ತೆರಳಲಿದ್ದಾರೆ.
ರಾಷ್ಟ್ರಪತಿಯ ಭೇಟಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಮಾರ್ಗಗಳಲ್ಲಿ ಸಮರೋಪಾದಿಯಲ್ಲಿ ಅಭಿವೃದ್ಧಿ ಮತ್ತು ಸಿದ್ಧತಾ ಕಾಮಗಾರಿಗಳು ನಡೆಯುತ್ತಿವೆ.
ಉಲ್ಲೇಖನೀಯವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಹೂಗುಚ್ಚ ನೀಡಿ ರಾಷ್ಟ್ರಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಆ ಪ್ರವಾಸದ ವೇಳೆ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗವಹಿಸಿದ್ದರು. ಜೊತೆಗೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ಚಾಮುಂಡಿ ಬೆಟ್ಟ ಹಾಗೂ ಮೈಸೂರು ಅರಮನೆಗೂ ಭೇಟಿ ನೀಡಿದ್ದರು.

