ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದ ನಿವಾಸಿಗಳಾದ ನಾಲ್ವರು ಈ ದುರಂತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ದಾಸರಿ ಉಮಾವತಿ (28), ದಾಸರಿ ರತ್ನಮ್ಮ (26), ಮಹೇಶ್ (20) ಹಾಗೂ ಶಿವಾನಂದ (28) ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶದ ಕಂದಕೂರು ಸಮೀಪದ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ನೀರಿನ ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಘಟನೆ ರಾಜೊಳ್ಳಿಬಂಡಾ ಆಣೆಕಟ್ಟಿನ ಕೊನೆಯ ಭಾಗದ ಬಳಿ ಸಂಭವಿಸಿದೆ.
ಈ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಕೊಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

