ರಾಯಚೂರು: ಸಿಂಧನೂರು ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿದ ಘಟನೆ ನಡೆದಿದೆ.
ಬಳಗನೂರು ಗ್ರಾಮದ ಸಂಗಮ ಎಂಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ಮೃತದೇಹವನ್ನು ಆಸ್ಪತ್ರೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಇಟ್ಟು ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರೊಂದಿಗೆ ಕುಟುಂಬಸ್ಥರು ತೀವ್ರ ವಾಗ್ವಾದ ನಡೆಸಿದರು. ಪೊಲೀಸರು ಪರಿಸ್ಥಿತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ವೈದ್ಯರ ನಿರ್ಲಕ್ಷದಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದರು.
ಬಳಿಕ ಸ್ಥಳಕ್ಕೆ ಆಗಮಿಸಿದ ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ ಅವರು ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಮನಗೊಳಿಸಲು ಪ್ರಯತ್ನಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸುರೇಶ್ ಗೌಡ ಅವರು, ಚಿಕಿತ್ಸೆ ನೀಡುವಲ್ಲಿ ಯಾವುದೇ ನಿರ್ಲಕ್ಷ ವಹಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದರು.
– ರಿಯಾಜ್, ಸಂಪೂರ್ಣ ನ್ಯೂಸ್, ರಾಯಚೂರು

