ಬೆಂಗಳೂರು: ಕನ್ನಡ ಸಾರಸ್ವತ ಲೋಕದ ದಿಗ್ಗಜ, ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಅವರು ಇವತ್ತು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಕರ್ನಾಟಕ ಸಾರಸ್ವತ ಲೋಕದಲ್ಲಿ ಭೈರಪ್ಪ ಅವರು ಅತ್ಯಂತ ಜನಪ್ರಿಯ ಸಾಹಿತಿ ಎಂದರೂ ತಪ್ಪಾಗಲಾರದು.
ಅವರ ಅಂತ್ಯ ಸಂಸ್ಕಾರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಆರ್‌ಆರ್ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆ ಬಳಿ ಮಾತನಾಡಿದ ಅವರು, ಭೈರಪ್ಪ ಅವರ ಪಾರ್ಥಿವ ಶರೀರ ಸದ್ಯ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿದೆ. ನಾಳೆ ಬೆಳಗ್ಗೆ 8ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಮಧ್ಯಾಹ್ನ 1 ಗಂಟೆಗೆ ಮೈಸೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಮೈಸೂರಿನ ಕಲಾ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ.
ನಂತರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

