ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದ್ದು, ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯಸರ್ಕಾರದ ಅಧಿಕೃತ ಆದೇಶದ ಪ್ರಕಾರ ಇಂದಿನಿಂದ ಡಿ.12 ರವರೆಗೆ ಮೂರು ದಿನ ಶೋಕಾಚರಣೆ ಜಾರಿಯಲ್ಲಿದ್ದು, ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳಿರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ.ರಾಜ್ಯಸರ್ಕಾರ ತನ್ನೆಲ್ಲಾ ಅಧಿಕೃತ ಕಾರ್ಯಕಲಾಪಗಳನ್ನು ಶೋಕಾಚರಣೆ ಹಿನ್ನೆಲೆಯಲ್ಲಿ ಬದಿಗೊತ್ತಿದೆ. ಡಿ.12ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಡಿ.13 ರ ಸಂಜೆ 4 ಗಂಟೆಗೆ ಮುಂದೂಡಲಾಗಿದೆ.
ಶಾಲಾ-ಕಾಲೇಜುಗಳಿಗೆ ರಜೆ :
ನಾಳೆ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ರಜೆ ಘೋಷಿಸುವುದಾಗಿ ತಿಳಿಸಿವೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಅರೆ ಸರ್ಕಾರಿ ಸಂಸ್ಥೆಗಳು, ನಿಗಮ ಮಂಡಳಿಗಳಿಗೂ ರಜೆ ಘೋಷಿಸಲಾಗಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ :
ನಿನ್ನೆ ಮಧ್ಯರಾತ್ರಿ 2.30ಕ್ಕೆ ಎಸ್.ಎಂ.ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು, ನಾಳೆ ಅವರ ಹುಟ್ಟೂರು ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸುವುದಾಗಿ ತಿಳಿಸಲಾಗಿದೆ.
ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ :
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ. ಎಸ್.ಎಂ.ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅವರ ಪಿತ್ರಾರ್ಜಿತ ಆಸ್ತಿಯಲ್ಲಿ ಕೆಫೆ ಕಾಫಿ ಡೇ ನಡೆಯುತ್ತಿತ್ತು. ಪಕ್ಕದಲ್ಲಿನ ಜಾಗದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಬೆಳಿಗ್ಗೆ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಮದ್ದೂರಿನವರೆಗೂ ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಲಿದೆ. ನಂತರ ಸೋಮನಹಳ್ಳಿಯಲ್ಲಿ ಸಂಜೆ 4 ಗಂಟೆಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.