‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಲಾಗಿದೆ. ಕೆಂಗೇರಿಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇತ್ತು. ರಾತ್ರೋರಾತ್ರಿ ಸಮಾಧಿಯನ್ನು ಕೆಡವಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಸ್ಥಳಕ್ಕೆ ಬಂದಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೆಂಗೇರಿ ಠಾಣೆಯ ಪೊಲೀಸರು ಭದ್ರತೆ ನೀಡುತ್ತಿದ್ದಾರೆ. ವಿಷ್ಣುವರ್ಧನ್ ಅವರ ಸಮಾಧಿ ತೆರವುಗೊಳಿಸಿದ್ದಕ್ಕೆ ಅಭಿಮಾನಿಗಳಿಗೆ ತೀವ್ರ ನೋವಾಗಿದೆ.
ರಾತ್ರೋರಾತ್ರಿ ಸಮಾಧಿಯನ್ನು ತೆರವು ಮಾಡಲಾಗಿದೆ ಎಂದು ಕಣ್ಣೀರು ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ಸ್ಟುಡಿಯೊದ ಒಳಗೆ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಹಾಗೂ ಅಭಿಮಾನಿಗಳ ಮಧ್ಯೆ ತಳ್ಳಾಟ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ರಾಜ್ಯ ಸರ್ಕಾರದ ಭರವಸೆಯ ನಡುವೆಯೂ ಅಭಿಮಾನಿ ಸ್ಟುಡಿಯೊದಲ್ಲಿದ್ದ ಸಮಾಧಿಯನ್ನು ಗುರುವಾರ ರಾತ್ರಿ ನೆಲಸಮ ಮಾಡಲಾಗಿದೆ ಎಂದು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ದೂರಿದ್ದಾರೆ.’ವಶಕ್ಕೆ ಪಡೆದ ಪ್ರತಿಭಟನಕಾರರನ್ನು ಬಿಡುಗಡೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ’ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಭೀಮಪ್ಪ ಹದ್ದಣ್ಣನವರ್ ತಿಳಿಸಿದ್ದಾರೆ.

