ದಾವಣಗೆರೆ, ಮಾ.23: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ನಡುವೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.
ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಮರ್ಥ ಶಾಮನೂರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಬೆಂಬಲ ಸೂಚಿಸಿದರು. ಅಭ್ಯರ್ಥಿಯ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಉಪಸ್ಥಿತರಿದ್ದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದರೂ, ಕೊನೆಗೂ ಸಮರ್ಥ ಶಾಮನೂರು ಅವರನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ. ನಾನು ಕೂಡ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೆ. ನಮ್ಮ ಪಕ್ಷ ಎಲ್ಲರನ್ನು ಒಳಗೊಂಡಿರುವ ಪಕ್ಷ. ಯಾವ ಶಾಸಕರು ನಿಧನರಾದರೂ ಅವರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ನೀತಿ. ಬಾಗಲಕೋಟೆಯಲ್ಲಿ ಮೇಟಿ ಅವರ ಚಿಕ್ಕ ಮಗನಿಗೆ, ದಾವಣಗೆರೆಯಲ್ಲಿ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ,” ಎಂದು ಹೇಳಿದರು.
ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಚಾರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

