ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ (ಸೆಕೆಂಡ್ ಪಿಯುಸಿ) ಪರೀಕ್ಷೆ-1 ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪರೀಕ್ಷೆಗೆ ಒಟ್ಟು 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶವಾಗದಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳು ಇಂದಿನಿಂದ ಮಾರ್ಚ್ 17ರವರೆಗೆ ನಡೆಯಲಿವೆ.
ಪರೀಕ್ಷೆಗೆ ನೋಂದಾಯಿಸಿರುವ ವಿದ್ಯಾರ್ಥಿಗಳ ಪೈಕಿ 6,46,801 ಮಂದಿ ತರಗತಿ ಹೊಸ ವಿದ್ಯಾರ್ಥಿಗಳು (ಫ್ರೆಷರ್ಸ್), 50,540 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಮಂದಿ ಖಾಸಗಿ ಅಭ್ಯರ್ಥಿಗಳಾಗಿದ್ದಾರೆ.
ವಿಭಾಗವಾರು ವಿವರ ಹೀಗಿದೆ:
ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 2,92,645 ವಿದ್ಯಾರ್ಥಿಗಳು
ವಾಣಿಜ್ಯ ವಿಭಾಗದಲ್ಲಿ 2,11,174 ವಿದ್ಯಾರ್ಥಿಗಳು
ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ
ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಜಿಲ್ಲಾ ಕೇಂದ್ರಗಳಿಂದಲೇ ಯಾವುದೇ ಪರೀಕ್ಷಾ ಕೇಂದ್ರದ ಯಾವುದೇ ಕೊಠಡಿಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನೂ ಜಾರಿಗೊಳಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆ ಪಾರದರ್ಶಕ ಹಾಗೂ ಸುಸೂತ್ರವಾಗಿರಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣ – KSRTC, BMTC ಮಹತ್ವದ ಘೋಷಣೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಸಾರಿಗೆ ನಿಗಮಗಳು ಸಿಹಿ ಸುದ್ದಿ ನೀಡಿವೆ. KSRTC ಹಾಗೂ BMTC ವತಿಯಿಂದ ಪರೀಕ್ಷಾ ಅವಧಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇಂದಿನಿಂದ ಮಾರ್ಚ್ 17ರವರೆಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ, ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಈ ಮೂಲಕ ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನುಕೂಲ ಕಲ್ಪಿಸಲಾಗಿದೆ.

