ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಈಗಾಗಲೇ ಎರಡು ಕೋಟಿ ಮನೆಗಳ ಪಟ್ಟಿ ತಯಾರಿಸುವ, ಜಿಯೋ-ಟ್ಯಾಗಿಂಗ್ ಹಾಗೂ ಗಣತಿ ಬ್ಲಾಕಿನ ನಕ್ಷೆ ಮಾಡುವ ಕಾರ್ಯವನ್ನು ಮಾಡಿ ಮುಗಿಸಿದ್ದೇವೆ. ಬ್ಲಾಕ್ ನಕ್ಷೆಗಳಲ್ಲಿ ಮನೆಗಳನ್ನು ಗುರುತಿಸುವುದಲ್ಲದೇ ರಸ್ತೆಗಳನ್ನು ನಕ್ಷೆಗಳಲ್ಲಿ ನಮೂದಿಸಿದ್ದು, ಗಣತಿದಾರರು ಸಮೀಕ್ಷೆ ಮಾಡಬೇಕಾದ ಮನೆಯನ್ನು ತಲುಪಲು ಅನುಕೂಲವಾಗುವಂತೆ ಮಾಡಿದ್ದೇವೆ ಎಂದು ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್. ನಾಯ್ಕ್ ಅವರು ಪತ್ರಿಕಾ ಗೋಷ್ಠಿಗೆ ತಿಳಿಸಿದರು.
ವಸಂತನಗರದ ದೇವರಾಜು ಅರಸು ಭವನದಲ್ಲಿ ಆಯೋಜಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯದ ಸಮಸ್ತ ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಗಣತಿ ಸಮೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ.
ಒಬ್ಬ ಸಮೀಕ್ಷಕರಿಗೆ ಸುಮಾರು 140 ರಿಂದ 150 ಮನೆಗಳನ್ನು ಹೊಂದಿರುವ ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದ್ದು, ಸದರಿ ಮನೆಗಳ ಸಮೀಕ್ಷಾ ಕಾರ್ಯವನ್ನು ಅವರಿಗೆ ವಹಿಸಿಕೊಡಲಾಗಿದೆ. ಸುಮಾರು 2 ಲಕ್ಷ ಶಿಕ್ಷಕರು ಹಾಗೂ ಇತರ ಸಿಬ್ಬಂದಿಗಳು ಸಮೀಕ್ಷೆ ಹಾಗೂ ಸಂಬಂಧಿತ ಕೆಲಸಗಳಲ್ಲಿ ನಿರತರಾಗಲಿದ್ದು, ಇಲಾಖಾ ಅಧಿಕಾರಿಗಳು ಮೇಲುಸ್ತುವಾರಿ ಮಾಡಲಿದ್ದಾರೆ.
ಒಬ್ಬ ಸಮೀಕ್ಷಕರು ಒಂದು ದಿನಕ್ಕೆ ಅಂದಾಜು 7 ರಿಂದ 8 ಮನೆಗಳನ್ನು ಸಮೀಕ್ಷೆ ಮಾಡಿದಲ್ಲಿ ರಾಜ್ಯಾದ್ಯಂತ ಇರುವ ಸುಮಾರು ಎರಡು ಕೋಟಿ ಕುಟುಂಬಗಳ ಮಾಹಿತಿಯನ್ನು 16 ದಿನಗಳಲ್ಲಿ ಮೊಬೈಲ್ ಆಪ್‌ನಲ್ಲಿ ಸಂಗ್ರಹಿಸಬಹುದಾಗಿದೆ. ಸಮೀಕ್ಷೆಯಲ್ಲಿ ಕುಟುಂಬಗಳ ದತ್ತಾಂಶಗಳನ್ನು ವಿಶೇಷ ತಂತ್ರಾಂಶ ಹೊಂದಿರುವ ಮೊಬೈಲ್ ಆಪ್ ಮೂಲಕ ಸಂಗ್ರಹಿಸಲಾಗುತ್ತದೆ.
ಸಮೀಕ್ಷಾ ಕಾರ್ಯಕ್ಕಾಗಿ ಸಮೀಕ್ಷಾದಾರರಿಗೆ ಮತ್ತು ಮೇಲ್ವಿಚಾರಕರಿಗೆ ಅಗತ್ಯ ಪ್ರಮಾಣದ ತರಬೇತಿಯನ್ನು ನೀಡಲಾಗಿದೆ. ಸಮೀಕ್ಷಾ ನಮೂನೆಯಲ್ಲಿ ಒಟ್ಟು 60 ಪ್ರಶ್ನೆಗಳ ಕಾಲಂ ಗಳಿದ್ದು ಮಾಹಿತಿಯನ್ನು ಸಂಗ್ರಹಿಸಲಾಗುವುದು. ನಾಗರಿಕರು ಒಂದಕ್ಕಿಂತ ಹೆಚ್ಚು ಬಾರಿ ಸಮೀಕ್ಷೆಗೆ ಒಳಪಡುವುದನ್ನು ತಪ್ಪಿಸಲು ಆಧಾರ್ ಸಂಖ್ಯೆ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಆರು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರೂ ಆಧಾರ್ ಸಂಖ್ಯೆಯನ್ನು ಸಿದ್ಧವಿಟ್ಟುಕೊಳ್ಳಲು ವಿನಂತಿಸಲಾಗಿದೆ. ಕುಟುಂಬದ ಬಳಿ ರೇಷನ್ ಕಾರ್ಡ್ ಇದ್ದಲ್ಲಿ ಅದರ ಸಂಖ್ಯೆಯನ್ನು ನಮೂದಿಸಿದರೆ ಅದರಲ್ಲಿ ಇರುವ ಮಾಹಿತಿಯು ಸ್ವಯಂಚಾಲಿತವಾಗಿ ಪ್ರದರ್ಶಿತವಾಗುತ್ತದೆ. ಇದರಿಂದ ಸಮಯ ಉಳಿತಾಯವಾಗುತ್ತದೆ ಮತ್ತು ಪರಿಶೀಲನೆಯ ನಂತರ ಸಮೀಕ್ಷೆ ಮುಂದುವರಿಯುತ್ತದೆ.
ಕೆಲಸದ ಮೇಲೆ ಹೊರಗೆ ಹೋಗಿರುವವರ ಮಾಹಿತಿಯನ್ನು ಪಡೆಯುವ ದೃಷ್ಠಿಯಿಂದ ಆಧಾರ್ ಪರಿಶೀಲನೆ ಮೂಲಕ ಆನ್‌ಲೈನ್‌ನಲ್ಲಿ ಸಮೀಕ್ಷೆ ನಡೆಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಅದರ ಮಾಹಿತಿಯನ್ನು ವೆಬ್ ಸೈಟ್ ವಿಳಾಸ https://kscbc.karnataka.gov.in ರಲ್ಲಿ ಪಡೆಯಬಹುದಾಗಿದೆ. ಹಾಗೂ ಏನಾದರೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ಸಹಾಯವಾಣಿ ಸಂಖ್ಯೆ 8050770004
ಸಂಪರ್ಕಿಸಬಹುದಾಗಿದೆ.

