ಬೆಂಗಳೂರು: ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿಅಧಿಕಾರ ಸ್ವೀಕರಿಸಿದರು. ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಭಾಗವಹಿಸಿದ್ದರು.
ಅಧಿಕಕ್ರ್ರ ಸ್ವೀಕರಿಸಿದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಜೊತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಾನು ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಅಲ್ಕಾ ಲಂಬಾ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕನ್ನಡಿಗರಿಗೆ ಅದರಲ್ಲೂ ರಾಜ್ಯದ ಮಹಿಳೆಯರಿಗೆ ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಅನೇಕ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ಹೇಳಿದರು.

