ನವದೆಹಲಿ : ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
“ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ.

