ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಯವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ, ಚೀನಾದ ಟಿಯಾಂಜಿನ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಗೆ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರ ಸಂದೇಶ ಮತ್ತು ಆಹ್ವಾನವನ್ನು ವಾಂಗ್ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರಿಸಿದರು. ಚೀನಾ ಹಾಗೂ ಭಾರತದ ಸಂಬಂಧ ಮೊದಲಿನಿಂತಾಗುತ್ತಾ ಎಂಬುದು ಸದ್ಯದ ಕುತೂಹಲವಾಗಿದೆ.
ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು ಮತ್ತು ಗಡಿ ವಿವಾದಕ್ಕೆ ನ್ಯಾಯಯುತ, ಸಮಂಜಸ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು ಎಂದು ಪ್ರಧಾನಿ ಕಚೇರಿ ತಿಳಿಸಿದೆ. ವಿ
ದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರೊಂದಿಗಿನ ದ್ವಿಪಕ್ಷೀಯ ಸಭೆ ಮತ್ತು ಎನ್‌ಎಸ್‌ಎ ಅಜಿತ್ ದೋವಲ್ ಅವರೊಂದಿಗಿನ ವಿಶೇಷ ಪ್ರತಿನಿಧಿಗಳ 24 ನೇ ಸಭೆಯ ಬಗ್ಗೆ ವಾಂಗ್ ಯಿ ತಮ್ಮ ಸಕಾರಾತ್ಮಕ ಅಭಿಪ್ರಾಯವನ್ನು ಹಂಚಿಕೊಂಡರು.
ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರು ಚೀನಾ-ಭಾರತ ಗಡಿ ಸಮಸ್ಯೆ ಮತ್ತು ದ್ವಿಪಕ್ಷೀಯ ಸಂಬಂಧಗಳ ಕುರಿತು ಸಮಗ್ರ, ಆಳವಾದ ಚರ್ಚೆ ನಡೆಸಿದರು ಎಂದು ಚೀನಾದ ವಿದೇಶಾಂಗ ಸಚಿವಾಲಯ ತಿಳಿಸಿದೆ.

