ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತ ಚಲಾವಣೆಯಾಗಿದೆ ಎಂದು ನೀವು ಮಾಡಿರುವ ಆರೋಪಗಳಿಗೆ ದಾಖಲೆಗಳನ್ನು ನೀಡಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಗಸ್ಟ್ 7ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಹೀಗಾಗಿ, ರಾಜ್ಯ ಚುನಾವಣಾ ಆಯೋಗ ಈ ದಾಖಲೆಗಳನ್ನು ನೀಡುವಂತೆ ಸೂಚನೆ ನೀಡಿದೆ.
ವಿಚಾರಣೆಯಲ್ಲಿ, ಶ್ರೀಮತಿ ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ. ಈ ಕಚೇರಿ ನಡೆಸಿದ ಪ್ರಾಥಮಿಕ ವಿಚಾರಣೆಯು ಪ್ರಸ್ತುತಿಯಲ್ಲಿ ನೀವು ತೋರಿಸಿರುವ ಟಿಕ್ ಗುರುತು ಮಾಡಿದ ದಾಖಲೆ ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಯಲ್ಲ ಎಂದು ಬಹಿರಂಗಪಡಿಸುತ್ತದೆ. ಆದ್ದರಿಂದ, ಶ್ರೀಮತಿ ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ತೀರ್ಮಾನಿಸಿರುವ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ವಿನಂತಿಸಲಾಗಿದೆ.
ಇದರಿಂದ ಈ ಕಚೇರಿಯಿಂದ ವಿವರವಾದ ವಿಚಾರಣೆಯನ್ನು ಕೈಗೊಳ್ಳಬಹುದು. ಹೀಗಾಗಿ ಸಂಬಂಧಿಸಿದ ಆರೋಪಗಳಿಗೆ ದಾಖಲೆಗಳನ್ನು ಒದಗಿಸಿ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ರಾಹುಲ್ ಗಾಂಧಿಗೆ ಅವರಿಗೆ ನೊಟೀಸ್ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ರಾಹುಲ್ ಗಾಂಧಿಯವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದ್ದರು.

