ಬೆಂಗಳೂರು, ಫೆ.22: ರಾಜ್ಯದ ಹಲವೆಡೆ ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಕಂಡುಬಂದಿದ್ದು, ಕೆಲ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರಿ ಗುಡುಗು-ಮಿಂಚಿನ ಆರ್ಭಟ ಕಂಡುಬರುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಸುಮಾರು 5 ಮಿ.ಮೀ ರಿಂದ 15 ಮಿ.ಮೀ ವರೆಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಚಾಮರಾಜನಗರ, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ವೇಳೆಯಲ್ಲಿ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇನ್ನೊಂದೆಡೆ, ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ, ಅಂದರೆ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿಯ ಸಮೀಪ ವಾತಾವರಣದ ಮೇಲ್ದರ್ಜೆಯಲ್ಲಿ ಚಂಡಮಾರುತದ ಮಾದರಿಯ ಸುಳಿಗಾಳಿ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದ್ದು, ಇದರ ಪ್ರಭಾವ ರಾಜ್ಯದ ಕೆಲ ಭಾಗಗಳ ಮೇಲೆ ಬೀರುವ ಸಾಧ್ಯತೆ ಇದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಅದೇ ರೀತಿ ಉತ್ತರ ಒಳನಾಡು ಭಾಗಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಒಣಹವೆ ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

