ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಚುನಾವಣೆಯ ವೇಳೆ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ದೋಷಗಳಿದ್ದು, ಆಸ್ತಿ ಮಾಹಿತಿ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ತೀರ್ಪು ನೀಡಿತ್ತು.
ಈ ತೀರ್ಪನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂಕೋರ್ಟ್, ಕೇವಲ ಆದಾಯ ಬಹಿರಂಗಪಡಿಸಿದರೆ ಸಾಕೇ ಅಥವಾ ವ್ಯವಹಾರಗಳನ್ನೂ ಸಂಪೂರ್ಣವಾಗಿ ಬಹಿರಂಗಪಡಿಸಬೇಕೇ ಎಂಬ ವಿಚಾರದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.
ಇದೇ ವೇಳೆ, ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರು 6 ವಾರಗಳೊಳಗೆ ತಮ್ಮ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಲಾಗಿದೆ. ಈ ತೀರ್ಪಿನಿಂದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಲಭಿಸಿದೆ.

