ಭುವನೇಶ್ವರ: ಓಡಿಶಾದ ಪುರಿಯಲ್ಲಿ ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿರುವ ಭಕ್ತರ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.
ಪುರಿ ಜಗನ್ನಾಥ ರಥಯಾತ್ರೆಯ ವೇಳೆ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಗುಂಡಿಚಾ ದೇವಸ್ಥಾನದ ಬಳಿ ಕಾಲ್ತುಳಿತ ಸಂಭವಿಸಿದ್ದು, 3 ಭಕ್ತರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳದ ಕೊರತೆಯಿಂದ ಮತ್ತು ಜನಸಂದಣಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ ಎನ್ನುವ ಆರೋಪದ ಮೇಲೆ ಸದ್ಯ ಪುರಿಯ ಜಿಲ್ಲಾಧಿಕಾರಿ ಮತ್ತು ಎಸ್‌ಪಿಯನ್ನು ವರ್ಗಾವಣೆ ಮಾಡಲಾಗಿದೆ.
ಅಲ್ಲದೇ ಗುಂಡಿಚಾ ದೇವಸ್ಥಾನದ ಬಳಿ ಕಾಲ್ತುಳಿತ ಸಂಭವಿಸದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಭಕ್ತರ ಕುಟುಂಬಗಳಿಗೆ ಓಡಿಶಾ ಸಿಎಂ ಮೋಹನ್ ಚರಣ್ ಮಾಝಿ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಾಗೂ ಈ ರೀತಿಯ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

