ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆಯಲ್ಲಿ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ ಹೊಸ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಾದಪ್ಪನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಪಾದಯಾತ್ರೆ ಮತ್ತು ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ದಿಷ್ಟ ಸಮಯ ನಿಗದಿ ಮಾಡಲಾಗಿದೆ. ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಜಿಲ್ಲಾಡಳಿತದ ಸೂಚನೆಗಳನ್ನು ಭಕ್ತರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಲಾಗಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಗ್ಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ತಿಂದ ಘಟನೆ ನಡೆದಿತ್ತು. ಈ ದುರ್ಘಟನೆ ಬಳಿಕ ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಂಡು, ಮೊದಲ ಹಂತವಾಗಿ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧವು ಜನವರಿ 24ರವರೆಗೆ ಜಾರಿಯಲ್ಲಿತ್ತು.
ಇದೀಗ ಹೊಸ ಆದೇಶದಂತೆ, ನಾಳೆಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮಾತ್ರ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನಗಳಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

