ಹೈದರಾಬಾದ್, ಡಿಸೆಂಬರ್ 25: ಒಡಿಶಾದಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಹತ್ಯೆಯಾಗಿದ್ದಾನೆ.
ಸಿಪಿಐ (ಮಾವೋವಾದಿ) ಸಂಘಟನೆಯ ಉನ್ನತ ಶ್ರೇಣಿಯ ಕೇಂದ್ರ ಸಮಿತಿ ಸದಸ್ಯ ಹಾಗೂ ಒಡಿಶಾ ಕಾರ್ಯಾಚರಣೆಗಳ ಮುಖ್ಯಸ್ಥರಾಗಿದ್ದ ಗಣೇಶ್ ಉಯಿಕೆ (69) ಅವರನ್ನು ಕಂಧಮಲ್ ಮತ್ತು ಗಂಜಾಂ ಜಿಲ್ಲೆಗಳ ಗಡಿಯಲ್ಲಿರುವ ರಾಂಪಾ ಅರಣ್ಯ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಂಯುಕ್ತ ತಂಡಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಿವೆ.
ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಇನ್ನೂ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗುರುವಾರ ನಡೆದ ಈ ಕಾರ್ಯಾಚರಣೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿಗಳ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಅತ್ಯಂತ ಮಹತ್ವದ ದಾಳಿಗಳಲ್ಲೊಂದು ಎಂದು ಭದ್ರತಾ ಮೂಲಗಳು ತಿಳಿಸಿವೆ.
ಭದ್ರತಾ ಪಡೆಗಳು ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

