ಬೆಂಗಳೂರು : ಬೈಕ್ ಸವಾರನಿಗೆ ಟ್ರಾಫಿಕ್ ಪೊಲೀಸರೊಬ್ಬರು ಕೆನ್ನೆಗೆ ಭಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ಬಿಸಿ ವಾಗ್ವಾದ ನಡೆದಿದೆ.
ಈ ವೇಳೆ ನೋಡ ನೋಡುತ್ತಲೇ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನೆ ಕೆನ್ನೆಗೆ ಭಾರಿಸಿದ್ದಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯ ಕೃತ್ಯ ಕಾನೂನು ಬಾಹಿರ ಎಂದು ಕೆಲ ನೆಟ್ಟಿಗರು ಆಕ್ರೋಶ ವ್ಕಕ್ತಪಡಿಸುತ್ತಿದ್ದು, ಯಾವುದೇ ಅಧಿಕಾರವಿಲ್ಲದಿದ್ದರೂ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ.
ಅವರ ವಿರುದ್ಧ ಇಲಾಖೆಯ ಹಿರಿಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಮತ್ತೊಬ್ಬ ಬಳಕೆದಾರ ಅಧಿಕಾರಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

