ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಫ್ಲೋರಿಂಗ್ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೀಣ್ಯದ ಎನ್ಟಿಟಿಎಫ್ ರಸ್ತೆ ಬಳಿಯ ಐದು ಅಂತಸ್ತಿನ ಕಟ್ಟಡದ ಸೆಂಟ್ರಿಂಗ್ ಕಾಮಗಾರಿ ನಡೆಯುವಾಗ ಏಕಾಏಕಿ ಕುಸಿದಿದೆ. ಪರಿಣಾಮ ಇಲ್ಲಿ ಕೆಲಸ ಮಾಡುತ್ತಿದ್ದ ಯಾದಗಿರಿ ಮೂಲದ ಹಿಮಾಂಶು (28) ಸ್ಥಳದಲ್ಲೇ ಮೃತಪಟ್ಟರೆ, ಮಾರ್ಗ ಮಧ್ಯೆ ಕಲಬುರಗಿ ಮೂಲದ ವಿರೇಶ್ (30) ಸಾವನ್ನಪ್ಪಿದ್ದಾನೆ. ಮತ್ತೋರ್ವ ಕಾರ್ಮಿಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಮೃತದೇಹಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.
ಮೃತ ಕಾರ್ಮಿಕರು ಸೋಲದೇವಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಶೆಟ್ಟಿ ಹಳ್ಳಿಯಲ್ಲಿ ವಾಸವಿದ್ದರು. ಕಟ್ಟಡ ಮಾಲೀಕರು ಯಾರು ಎಂಬುದನ್ನ ಪರಿಶೀಲಿಸಲಾಗುತ್ತಿದೆ. ಅವಘಡ ಸಂಬಂಧ ದೂರು ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

